ಬೆಂಗಳೂರು: ಮಹಿಳೆಯನ್ನು ವಿವಸ್ತ್ರಗೊಳಿಸಿ ಆ ಸಂದರ್ಭವನ್ನು ಚಿತ್ರೀಕರಿಸಿದ ಆರೋಪದಡಿ ದಾಖಲಾಗಿರುವ ಪ್ರಕರಣದಲ್ಲಿ ಜಾಮೀನು ಕೋರಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳಕ್ಕೆ (ಎಸ್ಐಟಿ) ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.
ಈ ಕುರಿತ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿ, ಪ್ರತಿವಾದಿ ಎಸ್ಐಟಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿತು.
ಪ್ರಜ್ವಲ್ ವಿರುದ್ಧ; ಭಾರತೀಯ ದಂಡ ಸಂಹಿತೆ-1860ರ (ಐಪಿಸಿ) ಕಲಂ 354ಎ (ಲೈಂಗಿಕ ಕಿರುಕುಳ), 354ಬಿ (ವಿವಸ್ತ್ರಗೊಳಿಸಲು ಬೆದರಿಕೆ), 354ಡಿ (ಹಿಂಬಾಲಿಸುವುದು) ಮತ್ತು 506 (ಕ್ರಿಮಿನಲ್ ಬೆದರಿಕೆ) ಜೊತೆಗೆ; ಮಾಹಿತಿ ತಂತ್ರಜ್ಞಾನ ಕಾಯ್ದೆ-2000 ಕಲಂ 66 ಇ ಮತ್ತು 67ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಜ್ವಲ್ ವಿರುದ್ಧ, ಮೂರು ಅತ್ಯಾಚಾರ ಮತ್ತು ಮಹಿಳೆಯನ್ನು ವಿವಸ್ತ್ರಗೊಳಿಸಿದ ಪ್ರಕರಣವೂ ಸೇರಿದಂತೆ ಒಟ್ಟು ನಾಲ್ಕು ಪ್ರಕರಣ ದಾಖಲಾಗಿವೆ. ಈಗಾಗಲೇ ಒಂದರಲ್ಲಿ ಸೆಷನ್ಸ್ ನ್ಯಾಯಾಲಯ ಶಿಕ್ಷೆ ವಿಧಿಸಿದೆ.

